ಚೆಯ್ಯಂಡಾಣೆ, ಫೆ. ೧೩: ಸಮಾಜ ಕಲ್ಯಾಣ ಇಲಾಖೆಯ ನೌಕರಿಗಾಗಿ ರಾಜ್ಯಮಟ್ಟದ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆ ಬೆಂಗಳೂರಿನಲ್ಲಿ ನಡೆಯಿತು.
ಬೆಂಗಳೂರಿನ ಬ್ಯಾಟರಾಯನ ಪುರದ ಜಿಕೆವಿಕೆ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಪಂದ್ಯಾಟದಲ್ಲಿ ಕೊಡಗು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಮಹಿಳಾ ಥ್ರೋಬಾಲ್ ತಂಡ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ಕೊಂಡಿದೆ.
ಮೊದಲ ಪಂದ್ಯದಲ್ಲಿ ಗದಗ ಜಿಲ್ಲಾ ತಂಡವನ್ನು ಸೋಲಿಸಿ, ನಂತರ ಬೆಳಗಾವಿ ಜಿಲ್ಲಾ ತಂಡವನ್ನು ಮಣಿಸಿ ಸೆಮಿಫೈನಲ್‌ಗೆ ಪ್ರವೇಶ ಗಿಟ್ಟಿಸಿಕೊಂಡಿತು. ಸೆಮಿಫೈನಲ್‌ನಲ್ಲಿ ಬೆಂಗಳೂರು ಕೇಂದ್ರ ಕಚೇರಿ ತಂಡವನ್ನು ನೇರ ಸೆಟ್‌ಗಳಿಂದ ಸೋಲಿಸಿ ಫೈನಲ್‌ಗೆ ಅರ್ಹತೆ ಗಿಟ್ಟಿಸಿಕೊಂಡರು. ಫೈನಲ್‌ನಲ್ಲಿ ಮೈಸೂರು ಜಿಲ್ಲೆಯ ತಂಡ ಕೊಡಗು ತಂಡವನ್ನು ಸೋಲಿಸಿ ಚಾಂಪಿಯನ್ ಆದರೆ ಕೊಡಗು ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.