ಮಡಿಕೇರಿ, ಮಾ. ೨೯: ವೀರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೊಟ್ಟೆಪಾಳಿ (ಕಲ್ಲಳ್ಳ) ಎಂಬಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನೂತನವಾಗಿ ಕಸವಿಲೇವಾರಿ ಕೇಂದ್ರ ನಿರ್ಮಿಸಲು ಮುಂದಾಗಿರುವ ಕ್ರಮವನ್ನು ಖಂಡಿಸಿ ಬಹುಜನ ಸಮಾಜ ಪಾರ್ಟಿ ನೇತೃತ್ವದಲ್ಲಿ ಮಾಲ್ದಾರೆ ಗ್ರಾಮ ಪಂಚಾಯತಿ ಮುಂದೆ ನಡೆಯುತ್ತಿರುವ ಪ್ರತಿಭಟನೆ ೬ನೇ ದಿನ ಮುಂದುವರೆದಿದ್ದು, ಅಧಿಕಾರಿಗಳ ಭರವಸೆ ಹಿನ್ನೆಲೆ ಎರಡು ದಿನಗಳ ಉಪವಾಸ ಸತ್ಯಾಗ್ರಹ ಹಿಂಪಡೆದು ಮತ್ತೆ ಪ್ರತಿಭಟನೆ ಮುಂದುವರಿಸಿದ್ದಾರೆ.

ಮುಖ್ಯ ಕಾರ್ಯನಿರ್ವಣಾಧಿಕಾರಿ ಸೂಚನೆಯಂತೆ ವೀರಾಜಪೇಟೆ ತಾಲೂಕಿನ ತಹಶೀಲ್ದಾರ್ ಬಿ. ಅನಂತ ಶಂಕರ ಹಾಗೂ ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಅಪ್ಪಣ್ಣ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದರು. ಈ ಸಂದರ್ಭ ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ದಿವಿಲ್ ಕುಮಾರ್ ಮಾತನಾಡಿ ಕಸ ವಿಲೇವಾರಿಗೆ ಗುರುತಿಸಿರುವ ಜಾಗದ ಸುತ್ತಮುತ್ತಲಿನಲ್ಲಿ ಹಲವು ಕುಟುಂಬಗಳು ವಾಸವಾಗಿದ್ದು ಜನವಸತಿ ಪ್ರದೇಶವಾಗಿದೆ.

ಇಲ್ಲಿ ತ್ಯಾಜ್ಯ ವಿಲೇವಾರಿಗೆ ಮುಂದಾದಲ್ಲಿ ಪರಿಸರ ನೀರು ಹಾಳಾಗುವುದರೊಂದಿಗೆ ಸ್ಥಳೀಯ ನಿವಾಸಿಗಳು ಸಾಂಕ್ರಾಮಿಕ ರೋಗಗಳಿಗೂ ತುತ್ತಾಗುವ ಆತಂಕವಿದೆ. ಕಳೆದ ಆರು ದಿನಗಳಿಂದ ಪ್ರತಿಭಟನೆ ನಡೆಸಲಾಗು ತ್ತಿದ್ದರೂ ಅದೇ ಜಾಗದಲ್ಲಿ ಕಾಮಗಾರಿ ಮುಂದುವರೆದಿದ್ದು ಕೂಡಲೇ ಸ್ಥಗಿತಗೊಳಿಸಬೇಕೆಂದರು. ಮನವಿ ಸ್ವೀಕರಿಸಿದ ತಹಶೀಲ್ದಾರ್ ಮುಖ್ಯ ಕಾರ್ಯ ನಿರ್ವಣಾಧಿಕಾರಿಗಳ ಸೂಚನೆಯಂತೆ ಗ್ರಾಮ ಪಂಚಾಯಿತಿಯಲ್ಲಿ ವಿಶೇಷ ಸಭೆ ನಡೆಸಿ ಪಂಚಾಯಿತಿ ನಿರ್ಣಯದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿ ಉಪವಾಸ ಸತ್ಯಾಗ್ರಹ ಕೈಬಿಡಬೇಕೆಂದು ಮನವಿ ಮಾಡಿದರು.

ಆಕ್ರೋಶಗೊಂಡ ಪ್ರತಿಭಟನಾಕಾರರು ಕಾಮಗಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿದರು. ಅಧಿಕಾರಿಗಳಿಂದ ಸ್ಪಂದನೆ ದೊರಕÀದ ಹಿನ್ನೆಲೆ ತಹಶೀಲ್ದಾರ್ ಅವರ ವಾಹನವನ್ನು ತಡೆಹಿಡಿದರು. ನಂತರ ಮೇಲಾಧಿಕಾರಿಗಳೊಂದಿಗೆ ಬರುವುದಾಗಿ ಅಧಿಕಾರಿಗಳು ತಿಳಿಸಿ ಅಲ್ಲಿಂದ ತೆರಳಿದರು.