ಕೂಡಿಗೆ, ಏ. ೧೬: ಸಂವಿಧಾನದ ಆಶಯಗಳಿಗೆ ಬದ್ಧರಾಗಿ ಮುನ್ನಡೆಯುವ ಬಹುದೊಡ್ಡ ಜವಾಬ್ದಾರಿ ಭಾರತ ದೇಶದ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ ವ್ಯಕ್ತಪಡಿಸಿದರು.
ಕೊಡಗು ವಿಶ್ವವಿದ್ಯಾಲಯ, ಜ್ಞಾನ ಕಾವೇರಿ ಆವರಣ ಚಿಕ್ಕಅಳುವಾರದ ಹಾರಂಗಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೪ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿ ದಿಸೆಯಿಂದಲೇ ಹಲವು ಅಪಮಾನಗಳನ್ನು ಎದುರಿಸಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಾಮಾಜಿಕ, ಸಮಾನತೆ ಮತ್ತು ನ್ಯಾಯಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟು ಆಧುನಿಕ ಭಾರತವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಶಿಕ್ಷಣ, ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ಶ್ರಮಿಸಿದರು. ದೀನ-ದುರ್ಬಲರ ಉನ್ನತಿಗಾಗಿ ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿದರು.
ಸಾಮಾಜಿಕ ಅಸಮಾನತೆಯ ಸಂಕೋಲೆಗಳನ್ನು ಮುರಿಯುವ ಸಾಧನವಾಗಿ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಿದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು ಭಾರತದಾದ್ಯಂತ ಅಂಬೇಡ್ಕರ್ ಜಯಂತಿ ಎಂದು ಆಚರಿಸಲಾಗುತ್ತದೆ. ಈ ದಿನದಂದು ಅವರ ಜೀವನ ಮತ್ತು ಕಾರ್ಯವನ್ನು ಗೌರವಿಸಲು ದೇಶಾದ್ಯಂತ ಸ್ಮರಣಾರ್ಥ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.
ಅಂಬೇಡ್ಕರ್ ಜಯಂತಿ ದಿನದಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿಶೇಷ ವಿಚಾರಧಾರೆಗಳನ್ನು ಅರಿತುಕೊಂಡು ನಮ್ಮ ಬದುಕಿನಲ್ಲಿ ಅಳವಡಿಸಿ ಕೊಳ್ಳಬೇಕು. ಇಡೀ ವಿಶ್ವವೇ ಕೊಂಡಾಡುವ ಅಂಬೇಡ್ಕರ್ ಅವರ ಕೊಡುಗೆ ಅಪಾರವಾದುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಬೋಧಕ ವೃಂದ, ಬೋಧಕೇತರ ಸಿಬ್ಬಂದಿಗಳು ಹಾಗೂ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳು ಹಾಜರಿದ್ದರು.