ಸೋಮವಾರಪೇಟೆ, ಏ. ೧೭: ಸಮೀಪದ ಯಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಆಂಗ್ಲ ಮಾಧ್ಯಮದಲ್ಲಿ ಎಲ್.ಕೆ.ಜಿ. ಹಾಗೂ ಯು.ಕೆ.ಜಿ. ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು.

ಹಾನಗಲ್ಲು ಗ್ರಾ.ಪಂ. ಅಧ್ಯಕ್ಷ ಯಶಾಂತ್‌ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗಗಳಲ್ಲಿ ಸರ್ಕಾರಿ ಶಾಲೆಗಳು ಉಳಿಯಬೇಕು. ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸರ್ಕಾರ ಶಾಲೆಗಳನ್ನು ಸ್ಥಾಪಿಸಿದ್ದು, ಇವುಗಳು ಮುಚ್ಚದಂತೆ ಎಚ್ಚರ ವಹಿಸಬೇಕು. ಈ ನಿಟ್ಟಿನಲ್ಲಿ ಆಂಗ್ಲಮಾಧ್ಯಮ ಶಿಕ್ಷಣ ಅಳವಡಿಸಿರುವುದು ಶ್ಲಾಘನೀಯ ಎಂದರು.

ಜಿ.ಪA. ಮಾಜೀ ಸದಸ್ಯ ಹಾಗೂ ವಕೀಲರಾದ ಬಿ.ಜೆ. ದೀಪಕ್ ಮಾತನಾಡಿ, ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಇಂತಹ ಸನ್ನಿವೇಶದಲ್ಲಿ, ಇವುಗಳನ್ನು ಉಳಿಸಿಕೊಳ್ಳಲು ಆಂಗ್ಲ ಮಾಧ್ಯಮದಲ್ಲಿ ತರಗತಿಗಳನ್ನು ಪ್ರಾರಂಭಿಸುವುದು ಅನಿವಾರ್ಯವಾಗಿದೆ. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಅಭಿಪ್ರಾಯಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ರೋಹಿತ್ ಮಾತನಾಡಿ, ಸರ್ಕಾರಿ ಶಾಲೆಗಳ ಉಳಿವಿಗೆ ಯೋಜನೆಯ ಮೂಲಕ ಈಗಾಗಲೇ ಸಾಕಷ್ಟು ಸವಲತ್ತುಗಳನ್ನು ನೀಡುತ್ತಾ ಬಂದಿದೆ. ಮುಂದಿನ ದಿನಗಳಲ್ಲಿಯೂ ಶಾಲೆಗಳಿಗೆ ಬೇಕಾದ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು ಎಂದು ತಿಳಿಸಿದರು.

ಎಲ್.ಕೆ.ಜಿ.-ಯು.ಕೆ.ಜಿ. ಶಾಲಾ ಸಮಿತಿ ಅಧ್ಯಕ್ಷ ಸುರೇಶ್ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಆಂಗ್ಲಮಾಧ್ಯಮ ಶಿಕ್ಷಣ ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಆಂಗ್ಲಮಾಧ್ಯಮ ತರಗತಿ ಆರಂಭಿಸಲಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ಕುಮಾರಸ್ವಾಮಿ ವಹಿಸಿದ್ದರು. ವೇದಿಕೆಯಲ್ಲಿ ಗ್ರಾಮದ ಹಿರಿಯರಾದ ಪುಪ್ಪಯ್ಯ, ಪ್ರಮುಖರಾದ ನಾಗರಾಜು, ಗ್ರಾಮದ ಅಧ್ಯಕ್ಷ ಮಲ್ಲಪ್ಪ, ದಾನಿಗಳಾದ ಲೋಕೇಶ್, ಪಂಚಾಯಿತಿ ಉಪಾಧ್ಯಕ್ಷೆ ರೇಣುಕಾ ವೆಂಕಟೇಶ್, ಸದಸ್ಯರಾದ ಲಲಿತಮ್ಮ, ಸಿ.ಆರ್.ಪಿ. ಪ್ರೇಮ, ಶಾಲಾ ಮುಖ್ಯ ಶಿಕ್ಷಕಿ ಎಲ್.ಎಂ. ಪ್ರೇಮ ಇದ್ದರು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಕಲಿಕೋಪಕರಣಗಳನ್ನು ವಿತರಿಸಲಾಯಿತು.