ಕಣಿವೆ, ಏ. ೨೨: ಇಲ್ಲಿನ ಕಾವೇರಿ ನದಿ ದಂಡೆಯಲ್ಲಿರುವ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಕಾಲೇಜು ಆವರಣ ದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಿವೃತ್ತ ಪ್ರಾಂಶುಪಾಲ ಡಾ. ದೇವರಾಜು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ವ್ಯಾಸಂಗದ ಅವಧಿಯಲ್ಲಿ ಕಠಿಣ ಪರಿಶ್ರಮ, ಏಕಾಗ್ರತೆ ಹಾಗೂ ಸಮಯ ಪಾಲನೆ ಮೈಗೂಡಿಸಿಕೊಳ್ಳಬೇಕು ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತಾಧಿಕಾರಿ ಬಿ. ಜೈವರ್ಧನ್ ಮಾತನಾಡಿ, ಉತ್ತಮ ಸಂಸ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಏಕಾಗ್ರತೆಯಿಂದ ಅಭ್ಯಾಸ ಮಾಡಿದರೆ ಜೀವನದ ಗುರಿ ತಲುಪಲು ಸಾಧ್ಯ ಎಂದರು.
ಮುಖ್ಯ ಅತಿಥಿಗಳಾಗಿದ್ದ ಕನ್ನಡ ಭಾರತಿ ಪದವಿ ಕಾಲೇಜು ವಿಭಾಗದ ಪ್ರಾಂಶುಪಾಲ ಕೆ.ಎಸ್. ರುದ್ರಪ್ಪ ಮಾತನಾಡಿದರು. ಕಾಲೇಜಿನ ಪದವಿ ಪೂರ್ವ ವಿಭಾಗದ ಪ್ರಾಂಶುಪಾಲ ಡಾ. ಎನ್.ನಾಗೇಂದ್ರ ಸ್ವಾಮಿ ಪ್ರಾಸ್ತಾವಿಕ ನುಡಿಯಾಡಿದರು.
ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಗೆ ಕಲಾವಿಭಾಗದಲ್ಲಿ ಎರಡನೇ ಸ್ಥಾನವನ್ನು ಗಳಿಸಿದ ವಿದ್ಯಾರ್ಥಿ ನವನೀತನ್ ಅವರನ್ನು ಸನ್ಮಾನಿಸಲಾಯಿತು. ಹಾಗೆಯೇ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕನ್ನಡ ಭಾಷಾ ವಿಷಯದಲ್ಲಿ ನೂರಕ್ಕೆ ನೂರು ಅಂಕ ಗಳಿಸಿದ ವಿದ್ಯಾರ್ಥಿನಿ ಮನ್ವಿತ ಅವರನ್ನು ಕೂಡ ಗೌರವಿಸಲಾಯಿತು. ಉಪನ್ಯಾಸಕಿ ರಶ್ಮಿ ನಿರೂಪಿಸಿ, ಸ್ವಾಗತಿಸಿ, ನಾಗರತ್ನ ವಂದಿಸಿದರು.